ZP TP Election - ಕಡೆಗೂ ಜಿಪಂ, ತಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್ | ಹೈಕೋರ್ಟ್'ನಲ್ಲಿ ಮಹತ್ವದ ವಿಚಾರಣೆ
ಮೂರೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಪಂ, ತಾಪಂ ಚುನಾವಣೆಗಳನ್ನು ನಡೆಸುವ ಸಂಬಂಧ ಹೈಕೋರ್ಟ್'ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು; ಮೇ 30ರೊಳಗೆ ಜಿಪಂ, ತಾಪಂ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಹೇಳಿದೆ...
WhatsApp - 1 | WhatsApp - 2 | WhatsApp - 3 | Join Telegram |

Kannada Mitra - News Desk.
ರಾಜ್ಯದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸುವ ಸಂಬಂಧ ಹೈಕೋರ್ಟ್'ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.
ವಿಚಾರಣೆಯ ವೇಳೆ ಮೇ 30ರೊಳಗೆ ಜಿ.ಪಂ, ತಾ.ಪಂ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಅದರ ಬಳಿಕ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ನಿಗದಿಪಡಿಸಬಹುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಹೇಳಿದೆ.
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ
ಇತ್ತೀಚೆಷ್ಟೇ ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ಅವರು ಮುಂಬರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು.
ಕ್ಷೇತ್ರ ಪುನರ್‌ವಿಂಗಡಣೆ ಮಾಡಿದ ಹಿನ್ನೆಲೆಯಲ್ಲಿ ಜಿಪಂ, ತಾಪಂ ಚುನಾವಣೆ ವಿಳಂಬವಾಗಿದೆ. ಯಾರಿಗೂ ಅನ್ಯಾಯವಾಗದ ಹಾಗೆ ಮೀಸಲಾತಿ ಪ್ರಕಟವಾದ ಬಳಿಕ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಶೀಘ್ರದಲ್ಲೇ ಮೀಸಲಾತಿ ಪ್ರಕಟವಾಗಲಿದೆ. ಮೀಸಲಾತಿ ಪಟ್ಟಿ ಕೈ ಸೇರುತ್ತಿದ್ದಂತೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಲಿದ್ದು; ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಿಗದಿ ಮಾಡುತ್ತೇವೆ ಎಂದು ಅವರು ಹೇಳಿದ್ದರು.
ಹೈಕೋರ್ಟ್’ಗೆ ರಾಜ್ಯ ಚುನಾವಣಾ ಆಯೋಗ
ನಿಗದಿತ ಅವಧಿಯೊಳಗೆ ಜಿ.ಪಂ ತಾ.ಪಂ ಚುನಾವಣೆಗಳನ್ನು ನಡೆಸುವಂತೆ ಅನುವು ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫಲವಾಗಿದ್ದು, ಆದಷ್ಟು ಬೇಗ ಮೀಸಲಾತಿ ಪಟ್ಟಿ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈ ಕೋರ್ಟ್’ಗೆ ಅರ್ಜಿ ಸಲ್ಲಿಸಿತ್ತು.
ಸದರಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿ ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್-ಜುಲೈ ತಿಂಗಳಲ್ಲಿ ಚುನಾವಣಾ ಆಯೋಗ ಚುನಾವಣೆಗಳನ್ನು ನಡೆಸಬಹುದು ಎಂದು ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹೇಳಿದರು. ಸರ್ಕಾರ ಮೀಸಲಾತಿ ಪಟ್ಟಿ ಕೊಡಲಿ, ಆಯೋಗ ದಿನಾಂಕ ನಿಗದಿಪಡಿಸಿಕೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣಿಂದ್ರ ತಿಳಿಸಿದರು.
WhatsApp - 1 | WhatsApp - 2 | WhatsApp - 3 | Join Telegram |